ಕನ್ನಡ ಶಾಲೆಗೆ ಅನುದಾನ ಒದಗಿಸದಿದ್ದರೆ ಹೋರಾಟ

Lead AnalystSite Administrator
Release DateFebruary 17, 2026
Intel Density5 min read
Signal Output:
ಕನ್ನಡ ಶಾಲೆಗೆ ಅನುದಾನ ಒದಗಿಸದಿದ್ದರೆ ಹೋರಾಟ

ಬೀದರ್: ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 1995 ರ ನಂತರ ಆರಂಭವಾದ ಕನ್ನಡ ಶಾಲೆಗಳಿಗೆ ಅನುದಾನ ಘೋಷಿಸದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಕನ್ನಡ ಸಂರಕ್ಷಣಾ ಸಮಿತಿಯ ರಾಜ್ಯ ಸಂಚಾಲಕರೂ ಆದ ಕರ್ನಾಟಕ ರಾಜ್ಯ ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಎಚ್ಚರಿಸಿದ್ದಾರೆ.

ಈಗಾಗಲೇ ಕನ್ನಡ ಶಾಲೆಗಳ ಸ್ಥಿತಿಗತಿ ಬಗ್ಗೆ ರಾಜ್ಯದ ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರ ಗಮನ ಸೆಳೆಯಲಾಗಿದೆ. ಎಲ್ಲರಿಂದಲೂ ಸರ್ಕಾರದ ಮೇಲೆ ಒತ್ತಡ ಹೇರುವ ಭರವಸೆ ದೊರಕಿದೆ ಎಂದು ತಿಳಿಸಿದ್ದಾರೆ.

ಅನುದಾನಕ್ಕಾಗಿ ರಾಜ್ಯಮಟ್ಟದಲ್ಲಿ ಎರಡು ಬಾರಿ ಹೋರಾಟ ನಡೆಸಲಾಗಿದೆ. ಸಚಿವರು ಬೇಡಿಕೆ ಈಡೇರಿಸುವ ಭರವಸೆ ಕೂಡ ನೀಡಿದ್ದರು. ಆದರೆ, ಅನಂತರ ಈ ದಿಸೆಯಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಅನುದಾನಕ್ಕಾಗಿ ದಶಕದಿಂದ ಹೋರಾಟ ನಡೆಸುತ್ತಲೇ ಬರಲಾಗುತ್ತಿದೆ. ಆದರೆ, ಸರ್ಕಾರ ಈವರೆಗೆ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಸಾವಿರಾರು ಕನ್ನಡ ಶಾಲೆಗಳು ಮುಚ್ಚಿವೆ. ಸಾವಿರಾರು ಶಾಲೆಗಳು ಆಂಗ್ಲ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ ಹೊಂದಿವೆ. ಕನ್ನಡ ಶಾಲೆಗಳ ಸ್ಥಿತಿ ಶೋಚನೀಯವಾಗಿದ್ದು, ಸರ್ಕಾರ ಅನುದಾನ ಘೋಷಿಸುವ ಮೂಲಕ ಅವುಗಳನ್ನು ರಕ್ಷಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಕನ್ನಡ ಶಾಲೆ ಉಳಿಸಲು ವಿಶೇಷ ಮುತುವರ್ಜಿ ವಹಿಸಬೇಕು. ಮುಖ್ಯಮಂತ್ರಿ ಹಾಗೂ ಸಚಿವರ ಮನವೊಲಿಸಿ ಖಾಸಗಿ ಕನ್ನಡ ಶಾಲೆಗಳಿಗೆ ಅನುದಾನ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.